ದಾವಣಗೆರೆ:  ರಾಜ್ಯದಲ್ಲಿ ಸರ್ಕಾರಿ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದ್ದು, ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆ ಮಿತಿಮೀರುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಎಎಪಿ ಜಿಲ್ಲಾಧ್ಯಕ್ಷ ಕೆ.ಎಸ್.ಶಿವಕುಮಾರಪ್ಪ ಮಾತನಾಡಿ, ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಸರ್ಕಾರ ಖಾಸಗಿ ಶಾಲೆಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಿದೆ. ಆದರೆ ನಮ್ಮ ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿವರ್ಷ ಶೇ.15 ರಷ್ಟು ಶುಲ್ಕ ಹೆಚ್ಚಳ ಮಾಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿವೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅವ್ಯವಸ್ಥೆಯಿಂದಾಗಿ ಖಾಸಗಿ ಶಾಲೆಗಳ ಮೊರೆ ಹೋಗುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆ ಮಿತಿ ಮೀರುತ್ತಿದ್ದು, ಇದಕ್ಕೆ ಕಡಿವಾಣ ಬೀಳಬೇಕು. ಆದರೆ, ರಾಜ್ಯದಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರ ಇದೆಯಾ ಎನ್ನುವ ಪ್ರಶ್ನೆ ಮೂಡುತ್ತಿದೆ. ಖಾಸಗಿ ಶಾಲೆಗಳಿಗೆ ಶುಲ್ಕ ನಿಗದಿ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರ ಹೈಕೋರ್ಟ್ ಮುಂದೆ ಸಮರ್ಪಕ ವಾದ ಮಂಡಿಸದಿರುವುದೇ ಇದಕ್ಕೆ ಕಾರಣವಾಗಿದೆ ಎಂದರು.

ರಾಜ್ಯ ಸರ್ಕಾರವು ಖಾಸಗಿ ಶಾಲೆಗಳೊಂದಿಗೆ ಕೈಜೋಡಿಸಿದೆ. ಈ ಶೈಕ್ಷಣಿಕ ವರ್ಷದಲ್ಲಾದರೂ ಖಾಸಗಿ ಶಾಲೆಗಳ ಶುಲ್ಕ ದಂಧೆಯಿಂದ ಪೋಷಕರನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳ ವಸೂಲಿಗೆ ಶುಲ್ಕ ನಿಯಂತ್ರಣ ಪ್ರಾಧಿಕಾರವು ತಡೆ ನೀಡಬೇಕು. ಇದೀಗ ಚುನಾವಣೆಯು ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತ ಗಮನಹರಿಸಬೇಕಿದೆ. ಕೂಡಲೇ ಸಭೆ ಕರೆದು ನ್ಯಾಯಾಲಯದ ಆದೇಶದ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಘಟಕ ಒತ್ತಾಯಿಸುತ್ತದೆ ಎಂದು ತಿಳಿಸಿದರು.

Share.
Leave A Reply

Exit mobile version