ದಾವಣಗೆರೆ : ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಬೇಕು ಹಾಗೂ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಎಂ.ಎಸ್ ರಾಮೇಗೌಡ ನೇತೃತ್ವದಲ್ಲಿ
ದಾವಣಗೆರೆ ಮಹಾನಗರ ಪಾಲಿಕೆಯ ಕಚೇರಿಯ ಮುಂಭಾಗದಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಸಾಂಕೇತಿಕವಾಗಿ ಉಪವಾಸ ಸತ್ಯಾಗ್ರಹ ನಡೆಸಿದರು.
ಈ ವೇಳೆ ಜಿಲ್ಲಾಧ್ಯಕ್ಷ ಎಂ.ಎಸ್ ರಾಮೇಗೌಡ ಮಾತನಾಡಿ ಕರವೇ ವೇದಿಕೆ ಕನ್ನಡ ನಾಡು ನುಡಿ ಭಾಷೆ ಸಂಸ್ಕೃತಿ, ಸಂಸ್ಕಾರ ಕನ್ನಡಿಗರ ಬದುಕು ಕಟ್ಟುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಾ ಬಂದಿದೆ.
ಕರವೇ ಕಳೆದ 25 ವರ್ಷಗಳಿಂದ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕೆಂದು ಹಲವಾರು ಹೋರಾಟಗಳ ಮಾಡುವ ಮೂಲಕ ಎಲ್ಲ ರಾಜ್ಯ ಸರ್ಕಾರಗಳ ಗಮನ ಸೆಳೆದರು ಯಾವುದೇ ಪ್ರಯೋಜನವಾಗಿಲ್ಲ. ಕರ್ನಾಟಕದ ಎಲ್ಲಾ ಬಗೆಯ ಉದ್ಯೋಗದಲ್ಲಿ ಕನ್ನಡಿಗರಿಗೆ ಸಿಂಹಪಾಲು ಇರಬೇಕೆಂಬುದು ಕರವೇಯ ನ್ಯಾಯಯುತವಾದ ಬೇಡಿಕೆ.
ಇದಕ್ಕಾಗಿ ಡಾ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲಾಗಿತ್ತು. ಆದರೆ ಖಾಸಗಿ ವಲಯ ದೊಡ್ಡದಾಗಿ ಬೆಳೆದ ಹಿನ್ನೆಲೆಯಲ್ಲಿ ಡಾ. ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗದ ಹಿನ್ನೆಲೆಯಲ್ಲಿ ಕನ್ನಡದ ಯುವ ಸಮುದಾಯ ಉದ್ಯೋಗವಿಲ್ಲದೆ ಬಳಲುವಂತಾಗಿದೆ.
ಕರ್ನಾಟಕಕ್ಕೆ ಹೊರ ರಾಜ್ಯಗಳಿಂದ ಅವ್ಯಾಹತವಾಗಿ ವಲಸೆ ನಡೆಯುತ್ತಿದ್ದು ಇತ್ತೀಚಿನ ವರ್ಷಗಳಲ್ಲಿ ಇದು ತೀವ್ರ ಸ್ವರೂಪ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಮಹಾನಗರಗಳು ವಲಸಿಗರ ಹಾವಳಿಯಿಂದ ಸಂಪೂರ್ಣ ಬದಲಾಗುತ್ತಿವೆ. ಕನ್ನಡಿಗರ ಉದ್ಯೋಗಗಳನ್ನು ಹೊರ ರಾಜ್ಯದವರು ಕಿತ್ತುಕೊಳ್ಳುತ್ತಿದ್ದಾರೆ.
ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ದಕ್ಕಬೇಕು.ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಬೇಕು.
ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು.ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ‘ಸಿ’ ಮತ್ತು ‘ಡಿ’ ರ್ದಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು.
ಎಲ್ಲಾ ಖಾಸಗಿ ಸಂಸ್ಥೆಗಳ ಇತರ ಹುದ್ದೆಗಳಲ್ಲಿ ಶೇ.80 ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು.ಹದಿನೈದು ವರ್ಷಗಳ ಕಾಲ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ.ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು.
ರಾಜ್ಯ ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅವಕಾಶವನ್ನು ಉದ್ದೇಶಿತ ಕಾನೂನಿನಲ್ಲಿ ಅಳವಡಿಸಬೇಕು ಎಂದು ಎಂ.ಎಸ್. ರಾಮೇಗೌಡ ಒತ್ತಾಯಿಸಿದರು.
ಧರಣಿಯಲ್ಲಿ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಬಸಮ್ಮ ಶಾಂತಮ್ಮ. ಮಂಜುಳಾ ಮಂಜುಳಾ,ಧರ್ಮರಾಜ್ ,.ಗೋಪಾಲ್ ದೇವರು ಮನೆ,ಪರಮೇಶ್ .ಲೋಕೇಶ್ . ಸುರೇಶ್, ತುಳಸಿರಾಮ್. ತನ್ವೀರ್, ದಾದಾಪೀರ್. ಗಿರೀಶ್, ಖಾದರ್ ಭಾಷಾ, ಆಟೋ ರಫಿಕ್ ,ಹರೀಶ್, ಅನ್ವರ್ ಸಾಬ್ ದಾದೇಶ್ ವಿಜಯೇಂದ್, ಹೊನ್ನಳ್ಳಿ ವಿನಯ್ ಮಂಜು ಭಾಷಾ ಮೊದಲಾದವರು ಉಪಸ್ಥಿತರಿದ್ದರು.