
ದಾವಣಗೆರೆ.: ಮಾರ್ಚ್ 3 ರಂದು ದಾವಣಗೆರೆ ಜಿಲ್ಲಾದ್ಯಂತ ಮೊದಲ ಸುತ್ತಿನ ಪಲ್ಸ್ ಪೊಲಿಯೋ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಆರೋಗ್ಯ ಇಲಾಖೆ , ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಸಮನ್ವಯತೆ ಯಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿದರು.
ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಮತ್ತು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಅಂಗವಾಗಿ ಇಂದು ನಡೆದ ವಿವಿಧ ಇಲಾಖೆ ಅಧಿಕಾರಿಗಳ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಪಾಕಿಸ್ತಾನ ಮತ್ತು ಅಫಘಾನಿಸ್ತಾನದಲ್ಲಿ 12 ಪೊಲಿಯೋ ಪ್ರಕರಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ವರ್ಷ ಮತ್ತೆ ವ್ಯಾಪಕ ಪಲ್ಸ್ ಪೊಲಿಯೋ ಆಂದೋಲನಾ ನಡೆಸಲು ನಿರ್ಧರಿಸಿದ್ದು, ಅದರಂತೆ ನಗರ, ಗ್ರಾಮೀಣ ಪ್ರದೇಶಗಳು ಸೇರಿದಂತೆ ಎಲ್ಲ ಕಡೆಗಳಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕೆಂದು ಸೂಚಿಸಿದರು.
ಅಭಿಯಾನದಲ್ಲಿ ಐದು ವರ್ಷದೊಳಗಿನ ಯಾವ ಮಗವೂ ಕೂಡ ಲಸಿಕೆಯಿಂದ ವಂಚಿತವಾಗಬಾರದು, ಈ ನಿಟ್ಟಿನಲ್ಲಿ ಆಶಾ,ಅಂಗನವಾಡಿ ಕಾರ್ಯಕರ್ತೆಯರನ್ನು ಬಳಕೆ ಮಾಡಿಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.