ದಾವಣಗೆರೆ : ರಾಜ್ಯ ಮೂರು ವಿಧಾನಸಭೆ ಉಪಚುನಾವಣೆಯಲ್ಲಿ ಭಾರಿ ಸದ್ದು ಮಾಡುತ್ತಿರುವುದು ಚನ್ನಪಟ್ಟಣ ಕ್ಷೇತ್ರ. ಬಿಜೆಪಿ, ಜೆಡಿಎಸ್ ಮೈತ್ರಿ ಮಾತ್ರವಲ್ಲ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೂ ಟಿಕೆಟ್ ಗೊಂದಲ ಮುಂದುವರಿದಿದೆ. ಮೈತ್ರಿ ಧರ್ಮದ ಪ್ರಕಾರ ಎನ್ಡಿಎ ಒಕ್ಕೂಟ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಆದರೆ, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ ಸಿಡಿದೆದ್ದಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಹಾಗಾದ್ರೆ ಸಿಪಿವೈ ಮುಂದಿನ ನಡೆಯಬೇಕು? ಇದರ ಹಿಂದಿನ ಮಾಸ್ಟರ್ ಮೈಂಡ್ಯಾರು? ಈ ಕುರಿತು ಮಹತ್ವದ ಸ್ಟೋರಿ ಇಲ್ಲಿನ ನೋಡಿ.
ಎನ್ಡಿಎ ಒಕ್ಕೂಟ ಸಂಡೂರು ಹಾಗೂ ಶಿಗ್ಗಾವಿ ವಿಧಾನಸಭೆ ಉಪಚುನಾವಣೆಗೆ ತನ್ನ ಇಬ್ಬರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ, ಚನ್ನಪಟ್ಟಣಕ್ಕೆ ಯಾರು ಎನ್ನುವ ಪ್ರಶ್ನೆ ಎದ್ದಿದೆ. ಮೂಲತ ಚನ್ನಪಟ್ಟಣ ಜೆಡಿಎಸ್ ಶಾಸಕರ ಕ್ಷೇತ್ರ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಇದೇ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕೇಂದ್ರ ಸಚಿವರಾದ ಮೇಲೆ ರಾಜೀನಾಮೆ ಸಲ್ಲಿಸಿದ್ದರು ಈ ಕ್ಷೇತ್ರವೀಗ ಉಪಚುನಾವಣೆಗೆ ಸಿದ್ದವಾಗಿದ್ದು ಭಾರಿ ಕುತೂಹಲ ಕೆರಳಿಸಿದೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ. ಆದರೆ, ಎನ್ಡಿಎ ಒಕ್ಕೂಟ ಆ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿದೆ. ಜೆಡಿಎಸ್ ನಿಖಿಲ್ಕುಮಾರಸ್ವಾಮಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆ. ಇದರಿಂದ ಕೆರಳಿರುವ ಸಿಪಿವೈ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಇದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಡಿಕೆ. ಸುರೇಶ ಸ್ಪರ್ಧಿಸುವ ಸಾಧ್ಯಯಿದ್ದರೂ ಡಿಕೆಶಿ ಲೆಕ್ಕಾಚಾರ ಬೇರೆದ್ದೇ ಇದೆ.ಒಂದು ವೇಳೆ ಜೆಡಿಎಸ್ ನಿಖಿಲ್ಕುಮಾರಸ್ವಾಮಿಗೆ ಟಿಕೆಟ್ ನೀಡಿದರೆ, ಆಗ ಡಿಸಿಎಂ ಡಿಕೆಶಿ ಫಿಲ್ಡ್ಗೆ ಎಂಟ್ರಿಯಾಗಿ ಬಿಜೆಪಿಯಲ್ಲಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ ಅವರನ್ನು ಕಾಂಗ್ರೆಸ್ಗೆ ಕರೆತಂದು ಟಿಕೆಟ್ ಕೊಡುವ ಪ್ಲಾನ್ ಮಾಡಿದ್ದಾರೆ. ಹಾಗಾನಾದ್ರು ಮಾಡಿದ್ರೆ ಜೆಡಿಎಸ್ ಹಾಗೂ ಬಿಜೆಪಿಗೆ ದೊಡ್ಡ ಹೊಡೆತ ಬೀಳಲಿದೆ. ಕಾಂಗ್ರೆಸ್ ಬಾವುಟ ಹಾರಿಸುವುದರಲ್ಲಿ ಎರಡು ಮಾತಿಲ್ಲ. ಈ ಪ್ಲಾನ್ ಪ್ರಕಾರವೇ ಯೋಗೇಶ್ವರ ಅವರು ಕಮಲ ತೊರೆದು ಹಸ್ತು ಮುಡಿಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಕೇಂದ್ರ ಸಚಿವ ಕುಮಾರಸ್ವಾಮಿ ಮಾತನಾಡಿ, ಸಿಪಿ ಯೋಗೇಶ್ವರ್ ಅವರು ಮೇಲಿದ್ದಾರೆ, ದೊಡ್ಡವರು. ಅವರ ಬಗ್ಗೆ ನಾನೇನು ಚರ್ಚೆ ಮಾಡಲಿ? ಅವರು ಏನು ಮಾಡುತ್ತಾರೆ ಎನ್ನುವುದು ನನಗೆ ಗೊತ್ತಿಲ್ಲ. ಅವರು ಕಾಂಗ್ರೆಸ್ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಬೇರೆ ಬೇರೆ ಪಕ್ಷಗಳ ಮುಖಂಡರ ಜತೆಯು ಸಂಪರ್ಕದಲ್ಲಿದ್ದಾರೆ. ಪಕ್ಕದ ಮದ್ದೂರು ಕ್ಷೇತ್ರದ ಶಾಸಕರ ಜೊತೆ ಸಂಪರ್ಕದಲ್ಲಿದ್ದಾರೆ ಅಂತ ಚರ್ಚೆ ನಡೆಯುತ್ತಿದೆ. ಎಲ್ಲವನ್ನೂ ಬಿಜೆಪಿ ವರಿಷ್ಠ ನಾಯಕರು ಗಮನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ಹೇಳಿಕೆ ದೊಡ್ಡ ಮಟ್ಟದ ಚರ್ಚೆ ಗ್ರಾಸವಾಗಿದೆ.
ಈಗ ಚನ್ನಪಟ್ಟಣ ವಿಚಾರವಾಗಿ ಅಭ್ಯರ್ಥಿ ಘೋಷಣೆ ಬಾಕಿ ಇದೆ. ಈಗಾಗಲೇ ಬಿಜೆಪಿ ವರಿಷ್ಠ ನಾಯಕರೇ ಹಲವು ಬಾರಿ ಹೇಳಿದ್ದಾರೆ. ನೀವು ಪ್ರತಿನಿಧಿಸುತ್ತಿರುವ ಕ್ಷೇತ್ರದ ಬಗ್ಗೆ ನೀವೇ ಅಂತಿಮ ನಿರ್ಧಾರ ತೆಗೆದುಕೊಳ್ಳಿ ಎಂದಿದ್ದಾರೆ. ಚನ್ನಪಟ್ಟಣ ಜೆಡಿಎಸ್ ಸ್ಪರ್ಧಿಸಿರುವ ಕ್ಷೇತ್ರ ಎನ್ನುವುದು ಅವರಿಗೆ ಗೊತ್ತಿದೆ. ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಚನ್ನಪಟ್ಟಣದಲ್ಲಿ ನಾವು ಘೋಷಣೆ ಮಾಡುತ್ತೇವೆ. ಚನ್ನಪಟ್ಟಣ ವಿಚಾರದಲ್ಲಿ ಇನ್ನೂ ನಾವು ಯಾವುದೇ ನಿರ್ಧಾರ ಮಾಡಿಲ್ಲ ಎಂದರು ಅವರು.
ಕಾಂಗ್ರೆಸ್ ನಾಯಕರಲ್ಲಿ ಏನಾದರೂ ಮಾಡಿ ಕುಮಾರಸ್ವಾಮಿ ವರ್ಚಸ್ಸು ಕುಗ್ಗಿಸಬೇಕು ಅನ್ನುವುದು ಕೆಲವರ ಉದ್ದೇಶ. ನಾನು ಎಲ್ಲಾ ಬಿಜೆಪಿ ನಾಯಕರ ಬಗ್ಗೆ ಹೀಗೆ ಹೇಳುತ್ತಿಲ್ಲ. ಕೆಲವರಿಗೆ ಈ ಮೈತ್ರಿಯನ್ನು ಜೀರ್ಣಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ಅವರು ದೂರಿದರು. ಮೈತ್ರಿಯನ್ನು ಹಾಳು ಮಾಡಲು ಕೆಲವರು ಹೀಗೆ ಮಾಡುತ್ತಿರಬಹುದು. ನನ್ನ ಗಮನಕ್ಕೂ ಹಲವಾರು ವಿಚಾರಗಳು ಬರುತ್ತಿವೆ. ಯೋಗೇಶ್ವರ್ ಅವರು ಉಪ ಮುಖ್ಯಮಂತ್ರಿಯನ್ನು ಈಗಾಗಲೇ ಎರಡು ಬಾರಿ ಭೇಟಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ. ಅವರು ಏತಕ್ಕೆ ಭೇಟಿ ಮಾಡಿದ್ದರು ಎಂಬುದು ನನಗೆ ಬೇಕಿಲ್ಲ ಎಂಬ ಮಾಹಿತಿಯನ್ನು ಕೇಂದ್ರ ಸಚಿವರು ಬಿಚ್ಚಿಟ್ಟರು.
ಬಿಜೆಪಿ ಜೆಡಿಎಸ್ ಮೈತ್ರಿಗೆ ಹುಳಿ ಹಿಂಡುವವರು ಬಹಳಷ್ಟು ಜನ ಇದ್ದಾರೆ. ಒಟ್ಟಾರೆ ಕುಮಾರಸ್ವಾಮಿಯನ್ನು ಹಾಳು ಮಾಡಲು ಹೊರಟಿದ್ದಾರೆ. ಅವರ ಪ್ರಯತ್ನ ಫಲ ಕೊಡುವುದಿಲ್ಲ. ಹುಳಿ ಹಿಂಡುವವರು ನಮ್ಮ ಪಕ್ಷದಲ್ಲಿ ಇಲ್ಲ. ಆದರೆ ಅಲ್ಲಿನ ಹುಳಿ ಹಿಂಡುವವರು ಕಾಂಗ್ರೆಸ್ ನಾಯಕರ ಜತೆ ಸೇರಿಕೊಂಡಿದ್ದಾರೆ. ಅದು ನನಗೆ ಗೊತ್ತಿದೆ. ಪ್ರಧಾನಮಂತ್ರಿ ಅವರನ್ನು ಅಸ್ಥಿರಗೊಳಿಸಲು ಅವರು ಕಾಂಗ್ರೆಸ್ ನಾಯಕರ ಜತೆ ಸೇರಿಕೊಂಡು ಮಸಲತ್ತು ಮಾಡುತ್ತಿರಬಹುದು. ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಧಕ್ಕೆ ಆಗಬಾರದು.
ಇಂತ ಕುತಂತ್ರಕ್ಕೆ ನಾನು ಯಾಕೆ ಬಲಿಯಾಗಬೇಕು? ನೋಡೋಣ, ಮುಂದೆ ಅಭ್ಯರ್ಥಿ ತೀರ್ಮಾನ ಮಾಡುತ್ತೇವೆ. ನನಗೆ ಬೇಕಿರುವುದು ಪ್ರಧಾನಮಂತ್ರಿಯವರಿಗೆ ಶಕ್ತಿ ತುಂಬುವುದಷ್ಟೇ. ಆ ನಿಟ್ಟಿನಲ್ಲಿ ನಾನು ತೀರ್ಮಾನ ಮಾಡುತ್ತೇನೆ. ಆ ನಿಟ್ಟಿನಲ್ಲಿ ಚನ್ನಪಟ್ಟಣ ಸೀಟು ಗೆಲ್ಲಬೇಕು. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಹುನ್ನಾರಕ್ಕೆ ಬಲಿ ಆಗುವುದಿಲ್ಲ ಎಂದು ಗುಡುಗಿದ್ದಾರೆ.ಒಟ್ಟಾರೆ ಸಿಪಿ ಯೋಗೇಶ್ವರ ಬಿಜೆಪಿ ಬಿಡುವುದು ಪಕ್ಕಾ ಎನ್ನಲಾಗಿದೆ. ಆದರೆ, ಕಾಂಗ್ರೆಸ್ ಸೇರ್ತಾರಾ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.