ದಾವಣಗೆರೆ : ಚನ್ನಪಟ್ಟಣದ ವಿಧಾನಸಭೆ ಉಪಚುನಾವಣೆಗೆ ಹೊಸ ತಿರುವು ಬಂದಿದ್ದು ಆಡಳಿತರೂಢ ಕಾಂಗ್ರೆಸ್ ಪಕ್ಷ ಮೈತ್ರಿ ಪಕ್ಷಗಳಿಗೆ ಭಾರಿ ಹೊಡತ ನೀಡಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಮರ್ಮಾಘಾತವಾಗಿದ್ದು ಸಿಪಿ ಯೋಗೇಶ್ವರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರಿಂದ ಕಾಂಗ್ರೆಸ್ ಆನೆಬಲ ಬಂದಂತಾಗಿದೆ. ಮೈತ್ರಿ ಪಕ್ಷಗಳು ಸೊರಗಿ ನೀರಾಗಿವೆ. ಹಾಗಾದ್ರೆ ಮೈತ್ರಿ ಪಕ್ಷಗಳ ಮುಂದಿನ ಕತೆಯೇನು? ಗ್ರೌಂಡ್ ರಿಪೋರ್ಟ್ ಏನ್ ಹೇಳುತ್ತೆ? ಈ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ.
ಬಿಜೆಪಿ ಹೈಕಮಾಂಡ್ ನಾಯಕರ ಮಾತಿಗೆ ಮನ್ನಣೆ ಕೊಡದ ಪಕ್ಷದ ಮಾಜಿ ಎಂಎಲ್ಸಿ ಸಿ.ಪಿ. ಯೋಗೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಮುಂದೆ ಕಾಂಗ್ರೆಸ್ ಸೇರಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ನಂತರ ಯೋಗೇಶ್ವರ್ ಕೆಪಿಸಿಸಿ ಕಛೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ವಿಜಯೇಂದ್ರ ಅವರಿಗೆ ರಾಜೀನಾಮೆ ನೀಡಿರುವ ಸಿ.ಪಿ. ಯೋಗೇಶ್ವರ ಕಾಂಗ್ರೆಸ್ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಪಿ ಯೋಗೇಶ್ವರ್ ಅವರಿಗೆ ಡಿ.ಕೆ ಶಿವಕುಮಾರ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಗುರುವಾರ ಅವರು ನಾಮಪತ್ರ ಸಲ್ಲಿಕೆ ಮಾಡಲು ತಯಾರಿಯನ್ನು ಸಹ ಮಾಡಿಕೊಂಡಿದ್ದಾರೆ.
ರಾಮನಗರ ಜಿಲ್ಲೆಯ ಪ್ರಮುಖ ಮುಖಂಡರಲ್ಲಿ ಒಬ್ಬರಾದ ಯೋಗೇಶ್ವರ್ ಅವರು ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ನಮ್ಮ ಪಕ್ಷದ ಮುಖಂಡರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ, ಈಗಾಗಲೇ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ. ಯೋಗೇಶ್ವರ್ ರಾಜಕಾರಣ ಆರಂಭಿಸಿದ್ದೆ ಕಾಂಗ್ರೆಸ್ನಿAದ, ಹೀಗಾಗಿ ಮರಳಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ನಾಳೆ ಬೆಳಗ್ಗೆ ಚನ್ನಪಟ್ಟಣ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಡಿಕೆ ಶಿವಕುಮಾರ ಹೇಳಿದರು.
ಮಾಜಿ ಸಚಿವ ಯೋಗೇಶ್ವರ್ ಮಾತನಾಡಿ, ಕಳೆದ ಎರಡು ಮೂರು ತಿಂಗಳಿಂದ ನಡೆದ ರಾಜಕೀಯ ಬೆಳವಣಿಗೆಗಳು ನನಗೆ ಅಸಮಾಧಾನ ಮೂಡಿಸಿದವು. ಮೈತ್ರಿ ಆದ ನಂತರದ ವಾತಾವರಣ ನನ್ನ ರಾಜಕೀಯ ಬೆಳವಣಿಗೆಗೆ ಪೂರಕ ವಾತಾವರಣ ಇರಲಿಲ್ಲ, ಕೆಲವೊಮ್ಮೆ ನಮಗೆ ಅಂತ ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ, ನಾನು ಯಾವುದೇ ಒತ್ತಡ ಹಾಗೂ ಷರತ್ತು ಇಲ್ಲದೆ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ, ಈ ಹಿಂದೆ ನಾನು ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ರಾಜಕೀಯ ಆರಂಭಿಸಿದ್ದೆ. ಈಗ ಮತ್ತೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರುತ್ತೇನೆ. ಇನ್ನು ಮುಂದೆ ಕ್ಷೇತ್ರದ ಅಭಿವೃದ್ಧಿಗಾಗಿ ಎಲ್ಲರ ಒಟ್ಟುಗೂಡಿ ಕೆಲಸ ಮಾಡುತ್ತೇನೆ ಎಂದರು.
ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್ಡಿಎ ಟಿಕೆಟ್ ಸಿಗಬಹುದು ಎಂದು ಯೋಗೇಶ್ವರ್ ನಿನ್ನೆಯವರೆಗೂ ಕಾದು ಕುಳಿತ್ತಿದ್ದರು. ಸಂಜೆವರೆಗೂ ಕಾಯುತ್ತೇನೆ ಎಂದು ಯೋಗೇಶ್ವರ್ ಅವರು ಪ್ರಲ್ಹಾದ್ ಜೋಶಿ, ಸಂಸದ ಡಾ. ಸಿ.ಎನ್.ಮಂಜುನಾಥ್ ಅವರಿಗೆ ತಿಳಿಸಿ ಚನ್ನಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು. ಆದರೆ, ಬಿಜೆಪಿ ಟಿಕೆಟ್ ಘೋಷಣೆ ಆಗದಿರುವ ಕಾರಣ ಸಿಪಿ ಯೋಗೇಶ್ವರ್ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚಿಸಿದರು.
ಬಳಿಕ ಒಂದೇ ಕಾರಿನಲ್ಲಿ ಇಬ್ಬರೂ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಆನಂತರ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ನಿನ್ನೆ ರಾತ್ರಿಯೇ ಸಿಎಂಗೆ ಸುಳಿವು ಸಿಕ್ಕಿತ್ತು. ಹೀಗಾಗಿ ಅವರು ವಯನಾಡಿಗೆ ಹೋಗುವುದನ್ನು ಬಿಟ್ಟು ನೇರವಾಗಿ ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ್ದರು. ಒಟ್ಟಿನಲ್ಲಿ ಸಿಪಿ ಯೋಗೇಶ್ವರ ಕಾಂಗ್ರೆಸ್ ಸೇರ್ಪಡೆಯಿಂದ ರಾಜ್ಯ ಸರ್ಕಾರಕ್ಕೆ ಆನೆಬಲ ಬಂದAತಾಗಿದ್ದರೆ, ಮೈತ್ರಿ ದೋಸ್ತಿಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕೈ ಕೈ ಹಿಸುಕಿಕೊಳ್ಳುತ್ತಿದ್ದಾರೆ.