ಶಿವಮೊಗ್ಗ : ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ, ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ದೊರಕಿದೆ.
ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಮನೆಯಲ್ಲಿ ಸುಮಾರು ಹತ್ತು ಲಕ್ಷ, ಬಂಗಾರ, ಭದ್ರಾವತಿ ಅಂತರಗಂಗೆ ಪಂಚಾಯಿತಿ ಅಧ್ಯಕ್ಷ ಮನೆಯಲ್ಲಿ ಸುಮಾರು ಐದು ಲಕ್ಷ ಹಣ ಸಿಕ್ಕಿರುವ ಮಾಹಿತಿ ಇದೆ. ಇದು ಇನ್ನು ಹೆಚ್ಚಳವಾಗುವ ಸಾಧ್ಯತೆ ಇದೆ.
12 ಅಧಿಕಾರಿಗಳ ಮೇಲೆ ಲೋಕ ರೈಡ್
ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.
ಶಿವಮೊಗ್ಗ, ಯಾದಗಿರಿ, ತುಮಕೂರು ಸೇರಿದಂತೆ 54 ಸ್ಥಳಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.
ಬೆಂಗಳೂರು ನಗರದ ಆರು ಅಧಿಕಾರಿಗಳ ಮೇಲೆ ದಾಳಿ ನಡೆಸಲಾಗಿದೆ.ಬೆಂಗಳೂರು, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶಿವಮೊಗ್ಗ, ಯಾದಗಿರಿ, ತುಮಕೂರಿನಲ್ಲಿ ಏಕಕಾಲಕ್ಕೆ 100ಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ಯಾದಗಿರಿ, ತುಮಕೂರಿನಲ್ಲಿ ತಲಾ ಒಬ್ಬ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ. ದಾಳಿ ನಡೆಸಿದ ಅಧಿಕಾರಿಗಳು ಅಕ್ರಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ಹಿನ್ನಲೆಯಲ್ಲಿ ದಾಳಿ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.