ದಾವಣಗೆರೆ : ಕಬಾಬ್ ಮತ್ತು ಕರಿದ ಮೀನು ಆಹಾರ ಪದಾರ್ಥಗಳಿಗೆ ಅಪಾಯಕಾರಿ ಕೃತಕ ಬಣ್ಣ ಹಾಕುವುದನ್ನು ನಿಷೇಧಿಸಲಾಗಿದ್ದು, ಸರ್ಕಾರದ ಈ ಆದೇಶ ಉಲ್ಲಂಘಿಸುವವರು ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಇಲಾಖೆ ಅಂಕಿತಾಧಿಕಾರಿ ಡಾ.ಜೆ.ಎಸ್.ನಾಗರಾಜ್ ತಿಳಿಸಿದ್ದಾರೆ.
ಈ ಕುರಿತು ಜಿಲ್ಲಾದ್ಯಂತ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಒಂದು ವೇಳೆ ಕೃತಕ ರಾಸಾಯನಿಕ ಹಾಕಿದ ಚಿಕನ್ ಕಬಾಬ್ ಮತ್ತು ಕರಿದ ಮೀನಿನ ಪದಾರ್ಥಗಳು ಕಂಡು ಬಂದಿದ್ದೇ ಆದಲ್ಲಿ ಅಂಥವರು ಜೈಲು ಶಿಕ್ಷೆ ಮತ್ತು ದಂಡಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.
ಸರ್ಕಾರದ ಈ ಆದೇಶ ಬೀದಿ ಬದಿಯ ತಳ್ಳಗಾಡಿ ವ್ಯಾಪಾರಿಗಳಿಂದ ಹಿಡಿದು ಪಂಚ ತಾರಾ ಹೋಟೋಲ್ ವರೆಗೂ ಅನ್ವಯವಾಗುತ್ತದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಆಹಾರ ಪದಾರ್ಥಗಳನ್ನು ತಯಾರಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವೆಜ್/ಚಿಕನ್/ಫಿಶ್ ಇತರೆ ಕಬಾಬ್ಗಳಲ್ಲಿ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ/ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್ಗಳು ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಪ್ರಯೋಗಾಲಯಗಳ ವರದಿ ತಿಳಿಸಿದೆ. ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ.
ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 08 ಕಬಾಬ್ನ ಮಾದರಿಗಳು ಕೃತಕ ಬಣ್ಣದಿಂದ (ಸನ್ಸೆಟ್ ಯೆಲ್ಲೋ – 07 ಮಾದರಿಗಳು ಹಾಗೂ ಸನ್ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ಮಾಡಿದೆ ಎಂದರು.
ನಗರದ ವಿಶ್ವೇಶ್ವರಯ್ಯ ಪಾರ್ಕ್, ನಿಟುವಳ್ಳಿ ಭಾಗದಲ್ಲಿ ಹೊಟೆಲ್, ಬೀದಿ ಬದಿ ವ್ಯಾಪಾರಿಗಳಿಗೆ ಈಗಾಗಲೇ ಜಾಗೃತಿ ಮೂಡಿಸಲಾಗಿದೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಸ್ಥಳಗಳಿಗೆ ಮತ್ತೊಮ್ಮೆ ಅನಿರೀಕ್ಷಿತವಾಗಿ ಭೇಟಿ ನೀಡಿ ಚಿಕನ್ ಮತ್ತು ಫಿಶ್ ಸ್ಯಾಂಪಲ್ ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗುವುದು. ವರದಿ ನಂತರ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.